ಮುಂದಿನ ವರ್ಷ ನಡೆಯಲಿರುವ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 75 ಉಪಗ್ರಹವನ್ನು ಉಡಾವಣೆ ಮಾಡುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ನ ಸರ್ಕಾರಿ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗಿಯಾಗಲಿದ್ದು, ಇದು ದೇಶದ ಮೊದಲ ಸರ್ಕಾರಿ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ ಹೇಳಿದ್ದಾರೆ.

ಸಾಮಾನ್ಯವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಈ ಭಾರಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಭಾರತೀಯ ತಾಂತ್ರಿಕ ಕಾಂಗ್ರೆಸ್ ಸಂಘ ಮತ್ತು ಇಸ್ರೋ ಸಹಾಯ ದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿರುತ್ತಿರುವುದು ಹೆಮ್ಮೆಯ ಸಂಗತಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಉಪಗ್ರಹದ ವಿನ್ಯಾಸ ಮತ್ತು ತಯಾರಿಕೆಯಲ್ಲಿ ಇತರೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಒಳಗೊಳ್ಳಲಾಗುವುದು. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಕೆಲವು ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಿದ್ದು, ಸಂಖ್ಯೆಗಳಿಗಿಂತ ಹೆಚ್ಚು ಬೋಧನೆ-ಕಲಿಕೆಯ ಗುಣಮಟ್ಟ ಮುಖ್ಯವಾಗಿದೆ. ಗುಣಮಟ್ಟದ ಶಿಕ್ಷಣ ನೀಡುವ ವಿಷಯದಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಸಂಸ್ಥೆಗಳೊಂದಿಗೆ ಸ್ಪರ್ಧಿಸಬೇಕು ಎಂದು ಅವರು ಹೇಳಿದ್ದಾರೆ.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಷನ್ ಚಾಲನೆಯಲ್ಲಿದ್ದು, ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ಶೇಕಡಾ 65 ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು.