ರಾಜ್ಯಾದ್ಯಂತ ಕೊರೋನಾ ವೈರಸ್ ಭೀತಿಯಿಂದಾಗಿ 7,8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಮಾರ್ಚ್ 31,2020ರ ವರೆಗೆ ಮುಂದೂಡಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ರಾಜ್ಯ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದ್ದು, ಮಾರ್ಚ್ 31ರವರೆಗೆ ಯಾವುದೇ ಪರೀಕ್ಷೆಗಳನ್ನು ನಡೆಸುವುದು ಬೇಡ ಎಂದು ಎಲ್ಲ ಶಾಲೆಗಳಿಗೆ ಶಿಕ್ಷಣ ಇಲಾಖೆ ಆದೇಶ ನೀಡಿದೆ.
ಮುಂದಿನ ಪರೀಕ್ಷೆಯ ಹೊಸ ದಿನಾಂಕವನ್ನು ಇನ್ನೂ ಘೋಷಣೆ ಮಾಡಿಲ್ಲ. ಕರ್ನಾಟಕದಲ್ಲಿ ಕೊರೋನಾ ವೈರಸ್ ಪ್ರಕರಣಗಳನ್ನು ನೋಡಿಕೊಂಡು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಮುಂದಿನ ಪರೀಕ್ಷಾ ದಿನಾಂಕವನ್ನು ನಿಗದಿ ಮಾಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.

ಎಸ್ಎಸ್ಎಲ್ಸಿ ಪರೀಕ್ಷೆಗಳು ಈಗಾಗಲೇ ನಿಗದಿಪಡಿಸಿರುವಂತೆ ಮಾರ್ಚ್ 27ರಿಂದ ಏಪ್ರಿಲ್ 9ರವರೆಗೆ ನಡೆಯಲಿದೆ. ಆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಭೀತಿಯಿಂದಾಗಿ ಒಂದು ವಾರ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ, ಸಮಾರಂಭಗಳು, ಮಾಲ್, ಥಿಯೇಟರ್ ಗಳಿಗೆ ಬಂದ್ ಮಾಡಲು ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ 1ರಿಂದ 6ನೇ ತರಗತಿಯವರೆಗಿನ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿತ್ತು.


Click it and Unblock the Notifications











