ಪದವಿ ಮತ್ತು ತಾಂತ್ರಿಕ ಕೋರ್ಸ್‌ಗಳನ್ನು ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮವನ್ನು ನ.18ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ನ.18ರಂದು ದಾವಣಗೆರೆಯ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲು ಇ-ಕಂಟೆಂಟ್ ತುಂಬಿಸಿದ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತದೆ. ಲ್ಯಾಪ್‌ಟಾಪ್ ನೀಡುವ ಸಂಬಂಧ ಈಗಾಗಲೇ ಟೆಂಡರ್ ಪೂರ್ಣಗೊಳಿಸಲಾಗಿದೆ. ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಈ ವರ್ಷ ಲ್ಯಾಪ್‌ಟಾಪ್ ಉಚಿತವಾಗಿ ನೀಡಲಾಗುತ್ತಿದೆ.
ಎಸ್‌ಸಿಪಿ, ಟಿಎಸ್‌ಸಿಪಿ ಯೋಜನೆಯಡಿ ಒದಗಿಸಲಾದ ಅನುದಾನದಲ್ಲಿ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತದೆ. ಈ ಯೋಜನೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿರುವ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಸಿಗಲಿದೆ.
ಈ ಉಚಿತ ಲ್ಯಾಪ್‌ಟಾಪ್ ವಿತರಣೆ ಸದ್ಯದ ಮಟ್ಟಿಗೆ ಪ.ಜಾ. ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಸೀಮಿತವಾಗಿರುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಇತರೆ ಎಲ್ಲ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು. 2018-19ನೇ ಸಾಲಿನಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದರು.
ರಾಜ್ಯದ ವಿವಿಧ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ಮತ್ತು ಊಟೋಪಚಾರದ ವ್ಯವಸ್ಥೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


Click it and Unblock the Notifications











