ಕರ್ನಾಟಕದೆಲ್ಲೆಡೆ ಚರ್ಚೆಯಾಗುತ್ತಿರುವ ಹಿಜಾಬ್ ವಿವಾದದ ನಡುವೆ ಹೈಕೋರ್ಟ್ ಸೂಚನೆಯಂತೆ ಬುಧವಾರದಿಂದ ಪದವಿ ಕಾಲೇಜು ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಪುನಾರಂಭ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ಫೆಬ್ರವರಿ 16ರಿಂದ ಪಿಯು ಕಾಲೇಜುಗಳನ್ನು ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವರಾದ ಅರಗ ಜ್ಞಾನೇಂದ್ರ ಮತ್ತು ಡಾ.ಸಿ.ಎನ್ ಅಶ್ವತ್ಥ ನಾರಾಯಣ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಲ್ಲದೇ ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ' ಎಂದು ಪೋಸ್ಟ್ ಮಾಡಿದ್ದಾರೆ.
ಫೆ.16ರಿಂದ ಪಿಯು (1&2) ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಸಚಿವರಾದ @JnanendraAraga @drashwathcn ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
— B.C Nagesh (@BCNagesh_bjp) February 14, 2022
ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಬುಗಿಲೆದ್ದ ಹಿಜಾಬ್-ಕೇಸರಿ ವಿವಾದದ ಹಿನ್ನೆಲೆಯಲ್ಲಿ ಫೆ.9ರಂದು ಶಾಲಾ ಕಾಲೇಜುಗಳಿಗೆ 3 ದಿನಗಳ ಕಾಲ ರಜೆಯನ್ನು ಮುಖ್ಯ ಮಂತ್ರಿಯವರು ಘೋಷಿಸಿದ್ದರು. ಅಂದರೆ ದಿನಾಂಕ 09-02-2022 ರಿಂದ 11-02-2022 ರವರೆಗೆ ಶಾಲಾ ಮತ್ತು ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿತ್ತು. ತದನಂತರ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 3 ದಿನಗಳ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆಬ್ರವರಿ 16ರ ವರೆಗೆ ವಿಸ್ತರಣೆ ಮಾಡಲಾಗಿತ್ತು.
ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ವಿಶ್ವವಿದ್ಯಾಲಯಗಳು, ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಮತ್ತು ಡಿಪ್ಲೊಮ ಕಾಲೇಜುಗಳಿಗೆ ಫೆಬ್ರವರಿ 16ರ ವರೆಗೆ ರಜೆ ವಿಸ್ತರಣೆ ಮಾಡಲಾಗಿತ್ತು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಬ್ರವರಿ 15ರ ರಜೆಯನ್ನು ಘೋಷಿಸಲಾಗಿದೆ.
ಈ ನಡುವೆಯೇ ಇಂದಿನಿಂದ 10ನೇ ತರಗತಿ ವರೆಗಿನ ಶಾಲೆಗಳು ಪುನರಾರಂಭಗೊಂಡಿವೆ. ಜೊತೆಗೆ ಸರ್ಕಾರವು ಸಕಲ ಮುನ್ನೆಚ್ಚರಿಕೆಯನ್ನು ವಹಿಸಿದೆ.