ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಏಪ್ರಿಲ್ 22 ರಿಂದ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಸಜ್ಜಾಗಿದೆ. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, " ಪಿಯು ಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆಯು ಪೊಲೀಸರ ಕಣ್ಗಾವಲಿನಲ್ಲಿ ನಡೆಯಲಿದೆ ಮತ್ತು ರಾತ್ರಿಯಿಡೀ ಮೇಲ್ವಿಚಾರಣೆಗಾಗಿ ಸಿಸಿಟಿವಿ ಕ್ಯಾಮೆರಾಗಳು ಇರಲಿವೆ" ಎಂದು ಹೇಳಿದರು.
ಪರೀಕ್ಷೆಯ ಅವ್ಯವಹಾರಗಳನ್ನು ಪರಿಶೀಲಿಸಲು ಸ್ಕ್ವಾಡ್ಗಳು ಇರುತ್ತವೆ ಎಂದು ತಿಳಿಸಿದರು. ಹಿಂದಿನ ವರ್ಷಗಳಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರಗಳು ವರದಿಯಾದ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಅವರು ಹೇಳಿದರು.

ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾರ್ಗಸೂಚಿಗಳು :
* ವಿದ್ಯಾರ್ಥಿಗಳು ಪರೀಕ್ಷಾ ಸಮಯಕ್ಕೆ ಕನಿಷ್ಠ 30 ನಿಮಿಷಗಳ ಮೊದಲು ಪರೀಕ್ಷಾ ಕೊಠಡಿಯನ್ನು ತಲುಪಬೇಕು.
* ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ಹೊಂದಿರಬಾರದು.
* ವಿದ್ಯಾರ್ಥಿಗಳು ತಮ್ಮದೇ ಆದ ಪೆನ್, ರೂಲರ್ಗಳು ಸೇರಿದಂತೆ ಎಲ್ಲಾ ಲೇಖನ ಸಾಮಗ್ರಿಗಳನ್ನು ಕೊಂಡೊಯ್ಯಬೇಕು.
* ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಓದಲು ಹೆಚ್ಚುವರಿಯಾಗಿ 15 ನಿಮಿಷಗಳ ಕಾಲಾವಕಾಶ ನೀಡಲಾಗುವುದು.
* ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕಿರುತ್ತದೆ.