
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಸಾಂದೀಪನಿ ವಿದ್ಯಾರ್ಥಿವೇತನ ಸೌಲಭ್ಯವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬಿಡುಗಡೆ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು (KSBDB) ಆರಂಭಿಸಿರುವ ಸಾಂದೀಪನಿ ವಿದ್ಯಾರ್ಥಿವೇತನವನ್ನು ಬ್ರಾಹ್ಮಣ ಸಮುದಾಯದ 9,206 ವಿದ್ಯಾರ್ಥಿಗಳಿಗೆ 13.77 ಕೋಟಿ ರೂ.ಗಳ ವಿದ್ಯಾರ್ಥಿ ವೇತನವನ್ನು ಮಂಡಳಿ ನೀಡಲಿದೆ. ಈ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರ ಲಾಭ ವರ್ಗಾವಣೆ (DBT) ಮೂಲಕ ಪಾವತಿಸಲಾಗುತ್ತದೆ.
ಈ ಸಂದರ್ಭದಲ್ಲಿ ಕೃಷಿ ಆಧಾರಿತ ವ್ಯಾಪಾರ ಆರಂಭಿಸಲು ಬಯಸುವ ಬ್ರಾಹ್ಮಣ ರೈತರಿಗೆ ನೆರವು ನೀಡಲು ಅನ್ನದಾತ ಯೋಜನೆ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಒದಗಿಸುವ ಪುರುಷೋತ್ತಮ ಯೋಜನೆಗೆ ಬೊಮ್ಮಾಯಿ ಅವರು ಚಾಲನೆ ನೀಡಿದರು.
ಬ್ರಾಹ್ಮಣರಲ್ಲಿ ಐಟಿ, ಬಿಟಿ ವೃತ್ತಿಗಳನ್ನು ಆಯ್ಕೆ ಮಾಡಿಕೊಂಡವರು ಆರ್ಥಿಕವಾಗಿ ಸಬಲರಾಗಿದ್ದಾರೆ. ಆದಾಗ್ಯೂ ಆರ್ಥಿಕವಾಗಿ ಹಿಂದುಳಿದವರೂ ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ಹೀಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಸಮಾರಂಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ, ನಿಗಮದ ಅಧ್ಯಕ್ಷ ಹೆಚ್.ಎಸ್. ಸಚ್ಚಿದಾನಂದ ಮೂರ್ತಿ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ, ಶಾಸಕ ಸತೀಶ್ ರೆಡ್ಡಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.