ರಾಜ್ಯದೆಲ್ಲೆಡೆ ಕೊರೋನಾ ಸಮಸ್ಯೆ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಕೋವಿಡ್ 19 ಸಮಸ್ಯೆಯಿಂದಾಗಿ ಶಾಲೆ ಮತ್ತು ಕಾಲೇಜುಗಳನ್ನು ತೆರೆಯುವುದು ಕಷ್ಟವಾಗಿದೆ ಹಾಗಾಗಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿ ಯಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಕೊಂಡಿದೆ. 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿದಂತೆ ಇತರ ಪದವಿ,ಸ್ನಾತಕೋತ್ತರ,ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester)ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸಲಾಗುವುದು. ಆದರೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ನಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜೊತೆ ನಿರಂತರ ಸಮಾಲೋಚನೆ ನಡೆಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ತೀರ್ಮಾನವನ್ನು ತೆಗೆದುಕೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸ್ಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರ್ಕಾರದ ತೀರ್ಮಾನಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಅಶ್ವಥ್ ನಾರಾಯಣ ಅವರು ತಿಳಿಸಿದರು.
ಈ ಸಂದರ್ಭದಲ್ಲಿ 2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ವಿವಿಯಲ್ಲಿ ಹೆಲ್ತ್‍ಲೈನ್ ಪ್ರಾರಂಭ ಮಾಡಲಾಗಿದೆ. ಅಗತ್ಯ ಮಾಹಿತಿ ಸಂಗ್ರಹ ಮಾಡಲು ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳಲು ಹೆಲ್ಪ್‍ಲೈನ್‍ಗೆ ಫೋನ್ ಮಾಡಬಹುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ಸಿಇಟಿ ಪರೀಕ್ಷೆ ಕುರಿತು ಮಾತನಾಡಿದ ಅವರು ಜುಲೈ 30 ಮತ್ತಯ 31ಕ್ಕೆ ಸಿಇಟಿ ಪರೀಕ್ಷೆಗಳು ನಡೆಯಲಿವೆ ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ಸಿಇಟಿ ಪರೀಕ್ಷೆಗೂ ಹೆಲ್ತ್ ಲೈನ್ ಮಾಡುತ್ತೇವೆ. ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳಬಹುದು. ಪಿಜಿಸಿಇಟಿ ಆಗಸ್ಟ್ 8, 9 ನಡೆಯುತ್ತೆ. ಡಿಪ್ಲೋಮಾ ಸಿಇಟಿ ಆಗಸ್ಟ್ 9ಕ್ಕೆ ನಡೆಯುತ್ತೆ. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಎಂಬುದನ್ನು ಅವರು ಸ್ಪಷ್ಟಪಡಿಸಿದರು.