ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ಚರ್ಚೆ ಮಾಡಿ ಲಾಕ್ಡೌನ್ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಇಂದು ಸಂಜೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಸಂಬಂಧಪಟ್ಟ ಇಲಾಖೆ ಸಚಿವರು, ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ಸಭೆಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದೆಲ್ಲೆಡೆ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಈ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಜೊತೆಗೆ ಮುಂದಿನ ದಿನಗಳಲ್ಲಿ ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವುದನ್ನೂ ತಿಳಿಯಲಾಗುವುದು ಎಂದಿದ್ದಾರೆ.
ಮಹಾರಾಷ್ಟ್ರ ಕೇರಳ ರಾಜ್ಯಗಳಲ್ಲೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಲಿವೆ. ಹಾಗಾಗಿ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ರಾಜ್ಯ ಸರ್ಕಾರಗಳು ಸೂಚಿಸಿವೆ. ಪಕ್ಕದ ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವಾಗ ನಮ್ಮ ರಾಜ್ಯದಲ್ಲೂ ಹರಡುವ ಪರಿಸ್ಥಿತಿ ಹೆಚ್ಚಿದೆ ಹೀಗಾಗಿ ರಾಜ್ಯದ ಗಡಿಭಾಗಗಳಲ್ಲಿ ಹೆಚ್ಚಿನ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಹೆಚ್ಚುತ್ತಿರುವ ಕೋವಿಡ್ ತೀವ್ರತೆ ನಡುವೆ ಶಾಲಾ ಕಾಲೇಜುಗಳಿಗೆ ಮತ್ತೆ ಬೀಗ ಬೀಳಲಿದ್ಯಾ ? ಎನ್ನುವ ಪ್ರಶ್ನೆಗೆ ತಜ್ಞರು ಏನು ಹೇಳುತ್ತಾರೆ ಎಂದು ನೋಡಿಕೊಂಡು ನಿರ್ಧಾರ ಕೈಗೊಳ್ಳುತ್ತೇವೆ. ಅಗತ್ಯಬಿದ್ದ ಸಂದರ್ಭದಲ್ಲಿ ಲಾಕ್ಡೌನ್, ಸೆಮಿಲಾಕ್ಡೌನ್ ಬಗ್ಗೆ ತತ್ಞರ ಜೊತೆ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿ 37,379 ಹೊಸ ಕೋವಿಡ್ ಪ್ರಕರಣ ದಾಖಲು. 24 ಗಂಟೆಯಲ್ಲಿ 11,007 ಜನರು ಗುಣಮುಖಗೊಂಡಿದ್ದಾರೆ. 124 ಜನರು ಸಾವನ್ನಪ್ಪಿದ್ದಾರೆ. ಗೋವಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಸರ್ಕಾರ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯ ತನಕ ನೈಟ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಕೇರಳದಲ್ಲಿ 2560 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 30 ಮಂದಿ ಮೃತಪಟ್ಟಿದ್ದಾರೆ, 2150 ಮಂದಿ ಚೇತರಿಸಿಕೊಂಡಿದ್ದಾರೆ.
ದೆಹಲಿಯಲ್ಲಿ ಕಳೆದ ಎರಡು ದಿನಗಳಲ್ಲಿ ಪರೀಕ್ಷೆಗೊಳಪಡಿಸಲಾಗಿರುವ ಮಾದರಿಗಳಲ್ಲಿ ಶೇ.84ರಷ್ಟು ಮಂದಿಗೆ ಓಮಿಕ್ರಾನ್ ಇರುವುದು ಪತ್ತೆಯಾಗಿದೆ. ಈ ಕುರಿತು ಆರೋಗ್ಯ ಸಚಿವರು ಮಾಹಿತಿ ನೀಡಿದ್ದು, ಓಮಿಕ್ರಾನ್ ರೂಪಾಂತರಿ ಬಹುಬೇಗ ಹರಡುವ ಸೋಂಕಾಗಿದ್ದು, ಎರಡು ದಿನಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗಿರುವ ಮಾದರಿಗಳಲ್ಲಿ ಶೇ.84ರಷ್ಟು ಮಂದಿಗೆ ಸೋಂಕು ತಗುಲಿರುವುದು ತಿಳಿದುಬಂದಿದೆ.