ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಶಾಲೆಗಳನ್ನು ಆರಂಭ ಮಾಡಿಲ್ಲ. ಈ ನಡುವೆಯೇ 2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ ತಿಂಗಳಿನಲ್ಲಿ ನಡೆಯುತ್ತವೆಯೇ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.
ಹೌದು ಶಾಲೆಗಳು ಇನ್ನೂ ಕೂಡ ಪ್ರಾರಂಭವಾಗದ ಕಾರಣದಿಂದಾಗಿ ಈ ವರ್ಷ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ ತಿಂಗಳಿನಲ್ಲಿ ನಡೆಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಕಾರಣದಿಂದಾಗಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಹಾನಿಯಾಗಿದ್ದು, ಶಾಲೆಗಳನ್ನು ಇನ್ನೂ ತೆರೆಯಲಾಗಿಲ್ಲ. ಆದರೆ ಜನವರಿ 1 ರಿಂದ ಶಾಲೆ ಕಾಲೇಜುಗಳು ಆರಂಭವಾಗಲಿವೆ. ಈ ಭಾರಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ ನಲ್ಲಿ ನಡೆಯುವುದಿಲ್ಲ. ಈ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಕುರಿತಂತೆ ಅತೀ ಶೀಘ್ರದಲ್ಲಿ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.