ಕರ್ನಾಟಕ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕೆಎಸ್ಆರ್ಟಿಸಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವುದಾಗಿ ಕೆಎಸ್‌ಆರ್‌ಸಿಟಿ ತಿಳಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ತಡವಾಗಿ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣಿಸುವ ಪರೀಕ್ಷಾ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ರಾಜ್ಯಾದ್ಯಂತ ಎಲ್ಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದೆ.
ಈ ವಿಚಾರದ ಕುರಿತು ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಜುಲೈ 19 ಹಾಗೂ ಜುಲೈ 22ರಂದು ತಾವು ವಾಸಿಸುವ ಪ್ರದೇಶದಿಂದ ಪರೀಕ್ಷಾ ಕೇಂದ್ರದ ತನಕ ಕೆಎಸ್ಆರ್ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಬಹುದು. ಪ್ರಯಾಣಿಸುವ ವಿದ್ಯಾರ್ಥಿಗಳು ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಸಾಕು ಯಾವುದೇ ರೀತಿಯ ಶುಲ್ಕ ಪಾವತಿಸಬೇಕಿಲ್ಲ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಹಾಗೂ ಪರೀಕ್ಷೆ ಮುಗಿದ ಬಳಿಕ ಮನೆಗೆ ಹಿಂದಿರುಗುವವರೆಗೂ ಈ ಅವಕಾಶ ಬಳಸಿಕೊಳ್ಳಬಹುದು. ಮುಖ್ಯವಾಗಿ ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ.


Click it and Unblock the Notifications











