ರಾಜ್ಯ ಸರ್ಕಾರ ನೀಡುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಗೆ ಆಧಾರ್ ಕಾರ್ಡ್ ಬೇಕಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಶಿಕ್ಷಣ ಇಲಾಖೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್ಆರ್ಡಿ)ಕ್ಕೆ ಪತ್ರ ಬರೆದು ಮಧ್ಯಾಹ್ನದ ಬಿಸಿಯೂಟಕ್ಕೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ ಮಾಡಲು ಸಾಧ್ಯವಿಲ್ಲ. ಆಧಾರ್ ಕಾರ್ಡ್ ಇಲ್ಲದವರಿಗೆ ಊಟವನ್ನು ನಿರಾಕರಿಸಲಾಗದು ಎಂದು ತಿಳಿಸಿದೆ.
ಮಧ್ಯಾಹ್ನ ಬಿಸಿಯೂಟ ಯೋಜನೆ ಜಾರಿಗೆ ತಂದಿರುವುದೇ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವುದಕ್ಕಾಗಿದೆ. ಇಂತಹ ಸಂದರ್ಭದಲ್ಲಿ ಆಧಾರ್ ಇಲ್ಲದಿದ್ದರೆ ಊಟ ಇಲ್ಲ ಎಂದು ಹೇಳಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತಕ್ಕೆ ನಾವೇ ಕಾರಣರಾಗುತ್ತೇವೆ. ಹೀಗಾಗಿ ನಾವು ಆಧಾರ್ ಇಲ್ಲದವರಿಗೂ ಊಟ ನೀಡುತ್ತೇವೆ ಎಂದು ಪತ್ರದಲ್ಲಿ ಬರೆದಿರುವುದಾಗಿ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.
ಮಾರ್ಚ್ ತಿಂಗಳಲ್ಲಿ ಕಡ್ಡಾಯಕ್ಕೆ ಸೂಚನೆ
ಮಾರ್ಚ್ ತಿಂಗಳಿನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಶಾಲೆಗಳಲ್ಲಿ ನೀಡುವ ಬಿಸಿಯೂಟದ ಕುರಿತು ಅಧಿಸೂಚನೆ ಹೊರಡಿಸಿತ್ತು. ಬಿಸಿಯೂಟದ ಯೋಜನೆಯಡಿ ಕಾರ್ಯನಿರ್ವಹಿಸುವ ಅಡಿಗೆಯವರು ಹಾಗೂ ಅಡಿಗೆ ಸಹಾಯಕರು ಮತ್ತು ವಿದ್ಯಾರ್ಥಿಗಳು ಕಡ್ಡಾಯ ಆಧಾರ್ ಸಂಖ್ಯೆ ಹೊಂದಿರುಬೇಕು ಎಂದು ತಿಳಿಸಿತ್ತು.
ಆಧಾರ್ ಕಡ್ಡಾಯಗೊಳಿಸಲು ಕಾರಣ
ಬಿಸಿಯೂಟ ಯೋಜನೆಯಲ್ಲಿ ಕೆಲವು ಅವ್ಯವಹಾರ ನಡೆಯುತ್ತಿದೆ ಎಂಬ ಮಾಹಿತಿ ಪರಿಗಣಿಸಿ, ಕಾರ್ಯಕ್ಷಮತೆ ಮತ್ತು ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
ಆಧಾರ್ ಕಡ್ಡಾಯಕ್ಕೆ ವಿರೋಧ
ಕೆಲ ದಿನಗಳ ಹಿಂದಷ್ಟೇ ಆಧಾರ್ ಕಾರ್ಡ್ ಇಲ್ಲದೆ ಬಿಸಿಯೂಟ ಸಿಗದೇ ಬಾಲಕಿಯೊಬ್ಬಳು ಮೃತಪಟ್ಟಿದ್ದ ಹಿನ್ನಲೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಬಿಸಿಯೂಟ ಯೋಜನೆ
ಈ ಯೋಜನೆಯು ಕೇಂದ್ರ ಸರ್ಕಾರದಿಂದ ಎಲ್ಲ ಶಾಲಾಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟ ಯೋಜನೆಯಾಗಿದೆ. ಶಾಲೆಗೆ ಹೋಗುವ ಮಕ್ಕಳ ಪೌಷ್ಟಿಕತೆಯನ್ನು ಹೆಚ್ಚಿಸುವುದು ಇದರ ಮುಖ್ಯ ಉದ್ದೇಶ. ಈ ಯೋಜನೆಯನ್ನು 2004ರಿಂದ ರಾಷ್ಟ್ರಾದ್ಯಂತ ಹಮ್ಮಿಕೊಳ್ಳಲಾಗಿದೆ.
ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ಒಳಗೊಂಡ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಉಚಿತ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ. ಎಲ್ಲ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಇದು ಜಾರಿಯಲ್ಲಿದೆ. ಬಿಸಿಯೂಟ ಯೋಜನೆ ಬಂದ ನಂತರ ಶಾಲಾ ದಾಖಲಾತಿ ಪ್ರಮಾಣ ಏರಿಕೆಯಾಗಿದ್ದು, ಬಡ ಮಕ್ಕಳನ್ನು ಶಾಲೆಗಳತ್ತ ಸೆಳೆಯಲು ಈ ಯೋಜನೆಯು ಅತ್ಯಂತ ಪರಿಣಾಮಕಾರಿಯಾಗಿದೆ.