
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನಿನ್ನೆ ಘೋಷಿಸಿದ್ದಾರೆ. ಇದರ ಬೆನ್ನಲೇ ಇಂದು ದ್ವಿತೀಯ ಪಿಯು ಫಲಿತಾಂಶಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂಕಗಳು ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣನೆಗೆ ತೆಗೆದುಕೊಂಡು ಜೂನ್ ತಿಂಗಳ ಅಂತ್ಯದಲ್ಲಿ ಗ್ರೇಡ್ ಮೂಲಕ ಫಲಿತಾಂಶ ಪ್ರಕಟಿಸಲು ಇಲಾಖೆಗೆ ಸೂಚಿಸಿದ್ದಾರೆ.
ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಪಿಯುಸಿ ಫಲಿತಾಂಶವನ್ನು ಪರಿಗಣಿಸದೇ ಕೇವಲ ಸಿಇಟಿ ಪರೀಕ್ಷೆಯ ಅಂಕಗಳನ್ನು ಮಾತ್ರ ರ್ಯಾಂಕಿಂಗ್ ಗೆ ಪರಿಗಣಿಸುವಂತೆ ಕೋರಿ ಸಚಿವ ಸುರೇಶ್ ಕುಮಾರ್ ಅವರು ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ಥನಾರಾಯಣ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಸುರೇಶ್ ಕುಮಾರ್ ಅವರು ಪತ್ರದಲ್ಲಿ ಕೋವಿಡ್ ಸಮಸ್ಯೆಯ ನಡುವೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಆದರೆ ದ್ವಿತೀಯ ಪಿಯು ಫಲಿತಾಂಶವನ್ನು ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಪರಿಗಣಿಸಿ ಸೂಕ್ತ ಮೌಲ್ಯವನ್ನು ಸೇರ್ಪಡಿಸಿ ಗ್ರೇಡಿಂಗ್ ಫಲಿತಾಂಶವನ್ನು ನೀಡಲು ನಿರ್ಧಾರ ಮಾಡಿದ್ದೇವೆ. ಅದಾಗ್ಯೂ ಯಾವುದೇ ವಿದ್ಯಾರ್ಥಿಯು ತನ್ನ ಫಲಿತಾಂಶದ ಬಗ್ಗೆ ತೃಪ್ತಿ ಹೊಂದದೇ ಇದ್ದಲ್ಲಿ, ಮುಂದಿನ ದಿನಗಳಲ್ಲಿ ನಡೆಸಲಾಗುವ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾಗಿದೆಯೆಂದೂ ಘೋಷಿಸಿದ್ದೇವೆ.
ಸಾಮಾನ್ಯವಾಗಿ ದ್ವಿತೀಯ ಪಿಯುಸಿ ಅಂಕಗಳನ್ನು ಸಿಇಟಿ ಪರೀಕ್ಷೆಗೆ ಪರಿಗಣಿಸಿ ರ್ಯಾಂಕಿಂಗ್ ಪಟ್ಟಿ ನೀಡಲಾಗುತ್ತಿತ್ತು. ಆದರೆ ಈ ಬಾರಿಯ ಗ್ರೇಡಿಂಗ್ ಫಲಿತಾಂಶವು ವಿದ್ಯಾರ್ಥಿಗಳ ಪಾಲಿಗೆ ತೃಪ್ತಿ ಹೊಂದದ್ದೇ ಇದ್ದಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಾಗಿದೆ. ಹಾಗಾಗಿ ವೃತ್ತಿಪರ ಕೋರ್ಸ್ಗಳ ದಾಖಲಾತಿಗೆ ಸಂಬಂಧಿಸಿದಂತೆ ಕೇವಲ ಸಿಇಟಿ ಪರೀಕ್ಷೆಯ ಅಂಕಗಳನ್ನು ಮಾತ್ರ ಪರಿಗಣಿಸಿ ರ್ಯಾಂಕಿಂಗ್ ಪಟ್ಟಿ ನೀಡುವ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗಿ ತಮ್ಮನ್ನು ಕೋರುತ್ತೇನೆ ಎಂದು ಸಚಿವರು ಮನವಿ ಮಾಡಿದ್ದಾರೆ.


Click it and Unblock the Notifications











